ಹುಬ್ಬಳ್ಳಿ-ಧಾರವಾಡ : ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆಗೆ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳಿಂದ ಪರ-ವಿರೋಧ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ನವೆಂಬರ್ 10ರ ಬೆಳಿಗ್ಗೆ 6 ಗಂಟೆಯಿಂದ ನ. 11ರ ಬೆಳಿಗ್ಗೆ 6 ಗಂಟೆಯವರೆಗೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸಿ.ಆರ್.ಪಿ.ಸಿ. ಕಲಂ ೧೪೪ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಆದೇಶ ಹೊರಡಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಮುನ್ನಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಹೊರಡಿಸಲಾಗಿದ್ದು, ಮೆರವಣೆಗೆ / ಬೈಕ್ ರ್ಯಾಲಿ, ವಾಹನಗಳಲ್ಲಿ ಧ್ವನಿವರ್ಧಕ ಬಳಸುವುದನ್ನು, ಬ್ಯಾನರ್, ಬಂಟಿಂಗ್ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಿಪ್ಪು ಜಯಂತಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸುವ ಸಾಧ್ಯತೆಗಳಿರುವುದರಿಂದ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ಗುಂಪು ಸೇರುವುದು, ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗಧೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕೂ ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಲು ಉಪಯೋಗಿಸಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಪ್ರತಿಕೃತಿ ಪ್ರದರ್ಶನ ಹಾಗೂ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದ್ದು, ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ಸದರಿ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ದ ಕಲಂ ೧೮೮ ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮವನ್ನು ಜರುಗಿಸಲು ಸಂಬಂಧಪಟ್ಟ ಪಿ.ಐ ರವರಿಗೆ ಅನುಮತಿ ನೀಡಲಾಗಿದೆ ಎಂದು ಅವಳಿ ನಗರ ಪೊಲೀಸ್ ಆಯುಕ್ತ ಎಂ.ಎನ್ . ನಾಗರಾಜ ತಿಳಿಸಿದ್ದಾರೆ.