ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿರುವಂತೆಯೇ ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿಯು ಸಮರ ಸಾರಿದೆ.
ಸೋಮವಾರ ನಗರದಲ್ಲಿ ಬೃಹತ್ ರೈತ ಪ್ರತಿಭಟನೆ ಹಮ್ಮಿಕೊಂಡು ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಾಗಿನಿಂದ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಕಬ್ಬು ಬೆಳೆಗಾರರ ವಿಷಯದಲ್ಲಿ ರಾಜ್ಯ ಸರ್ಕಾರವು ಸಂಪೂರ್ಣವಾಗಿ ಯಡವಿದ್ದು, ರೈತರ ಬಾಕಿ ಹಣ ಪಾವತಿಸುವಂತೆ ಸಕ್ಕರೆ ಕಾರ್ಖಾನೆಗಳ ಮಾಲೀಕ ರಿಗೆ ಸೂಚಿಸಲು ಆಗಿಲ್ಲ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡರು.
ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರು, ಜನಸಾಮಾನ್ಯರನ್ನು ಕೀಳಾಗಿ ಕಾಣಲಾಗುತ್ತಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಬಗ್ಗೆ ಅವರಿಗೆ ಅರಿವೆ ಇಲ್ಲ. ಮನಸ್ಸಿಗೆ ಬಂದಂತೆ ನಾಲಿಗೆ ಹರಿಬಿಟ್ಟು ಎಲ್ಲರನ್ನು ಕಾಲು ಎಳೆಯುತ್ತಿದ್ದಾರೆ ಎಂದು ಗುಡುಗಿದರು.
ರೈತರ ಸಾಲಮನ್ನಾ ಹೆಸರಿನಲ್ಲಿ ಕುಮಾರಸ್ವಾಮಿ ರಾಜಕಾರಣ ಮಾಡುತ್ತಿದ್ದಾರೆ. ಹೊರತು ಈವರೆಗೆ ರೈತರ ಸಾಲಮನ್ನಾ ಆಗಿಲ್ಲ. ಬರೀ ಕಣ್ಣೀರು ಹಾಕುತ್ತ ಡೊಂಬರಾಟ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಈ ಹೋರಾಟದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಆರ್. ಅಶೋಕ್ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ಪಾಲ್ಗೊಂಡಿದ್ದರು.