ಹಾಸನ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಸಚಿವ ಎ. ಮಂಜು ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಈಗಾಗಲೇ ಜೆಡಿಎಸ್ ಪಾಳೇಯಕ್ಕೆ ನಡುಕ ಹುಟ್ಟಿಸಿರುವ ಎ. ಮಂಜು ಸೋಮವಾರ ತಮ್ಮ ಸಹಸ್ರಾರು ಕಾರ್ಯಕರ್ತರ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದರು.
ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣನಿಗಾಗಿ ಹಾಸನ ಲೋಕಸಭಾ ಕ್ಷೇತ್ರ ಬಿಟ್ಟು ಕೊಟ್ಟ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತುಮಕೂರಿನತ್ತ ಮುಖ ಮಾಡುತ್ತಿದ್ದಂತೆ ಹಾಸನದಿಂದ ಮಾಜಿ ಸಚಿವ ಎ. ಮಂಜು ಬಿಜೆಪಿ ಪಾಳೇಯದಲ್ಲಿ ಗುರುತಿಸಿಕೊಂಡು ಅಖಾಡಕ್ಕೆ ಧುಮುಕಿದ್ದಂತೆ ಚುನಾವಣಾ ಕಣ ಇನ್ನಷ್ಟು ರಂಗೇರುವಂತೆ ಮಾಡಿದೆ.
ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣಗೆ ಮೊದಲ ಚುನಾವಣೆಯಲ್ಲಿಯೇ ಸೋಲಿನ ರುಚಿ ತೋರಿಸಬೇಕು ಎಂದು ಹಠಕ್ಕೆ ಬಿದ್ದಿರುವ ಬಿಜೆಪಿ ನಾಯಕರು ಎ. ಮಂಜುಗೆ ಸಾಥ್ ನೀಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹಾಸನ ನಗರ ಶಾಸಕ ಪ್ರೀತಂಗೌಡ ಸೇರಿದಂತೆ ಅನೇಕರು ನಾಮಪತ್ರ ಸಲ್ಲಿಕೆ ಹಾಜರಿದ್ದು, ಹಾಸನ ನಗರದಲ್ಲಿ ಕೇಸರಿಯ ಶಕ್ತಿ ಪ್ರದರ್ಶನ ಮಾಡಿದರು.
ಹಾಸನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಈಗಾಗಲೇ ಬಿರುಸಿನ ಪ್ರಚಾರ ಆರಂಭಿಸಿದ್ದು, ಅಪ್ಪ ಹಾಗೂ ಸಚಿವ ಹೆಚ್.ಡಿ. ರೇವಣ್ಣ ಹಾಗೂ ತಾಯಿ ಭವಾನಿ ರೇವಣ್ಣ ಸೇರಿದಂತೆ ಜೆಡಿಎಸ್ ಶಾಸಕರು ಬೆನ್ನಿಗೆ ನಿಂತರೆ, ಬಿಜೆಪಿ ಶಾಸಕ ಪ್ರೀತಂ ಗೌಡ ಸೇರಿದಂತೆ ಬಿಜೆಪಿಯ ಪಡೆ ಎ ಮಂಜು ಪರ ಬ್ಯಾಂಟಿಂಗ್ ಮಾಡುತ್ತಿದ್ದಾರೆ.
ಮಾಜಿಪ್ರಧಾನಿ ಹೆಚ್.ಡಿ. ದೇವೇಗೌಡರ ತವರು ಜಿಲ್ಲೆಯಲ್ಲಿ ವಿಜಯ ಮಾಲೆ ಯಾರ ಪಾಲಿಗೆ, ಮತದಾರರು ಯಾರ ಕಡೆಗೆ ವಾಲುತ್ತಾರೆ ಎಂಬುದು ಕಾದು ನೋಡಬೇಕಿದೆ.