ಹುಬ್ಬಳ್ಳಿ : ಭೂಸ್ವಾಧೀನ್ ಕಾಯ್ದೆ ತಿದ್ದುಪಡಿ ರೈತರಿಗೆ ಮರಣ ಶಾಸನವಾಗಿದೆ ಎಂದು ಆರೋಪಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದ ನೂರಾರು ರೈತರನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ವಿವಿಧ ರೈತ ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿ ಜಮಾಯಿಸಿ ಹಲವು ಗಂಟೆಗಳ ಕಾಲ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬರಗಾಲದಿಂದ ರಾಜ್ಯದ ರೈತರು ತತ್ತರಿಸಿ ಹೋಗಿದ್ದಾರೆ. ಜನ, ಜಾನುವಾರುಗಳಿಗೆ ಪರಿಹಾರ ಕಾರ್ಯಕ್ರಮ ಜಾರಿ ಮಾಡಲು ವಿಫಲವಾದ ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ದ ರೈತರು ಘೋಷಣೆ ಕೂಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮೀಶ್ರ ಸರಕಾರ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದು ಜಿಲ್ಲಾಧಿಕಾರಿಗೆ ಅಧಿಕಾರ ನೀಡಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಈ ಹಿನ್ನಲೆಯಲ್ಲಿ ಪೊಲೀಸರು ನೂರಾರು ರೈತರನ್ನು ಬಂಧಿಸಿ, ಡಿ.ಆರ್. ಮೈದಾನಕ್ಕೆ ಕರೆದುಕೊಂಡು ಬಂದು ಸಂಜೆ ನಂತರ ಬಿಡುಗಡೆಗೊಳಿಸಲಿದ್ದಾರೆ.
ಪ್ರತಿಭಟನೆಯಲ್ಲಿ ಚಂದ್ರಶೇಖರ ಕಬ್ಬೂರ ಅಮೃತ ಕಮ್ಮಾರ, ರಮೇಶ ಕಿತ್ತೂರ, ಫಕೀರಪ್ಪ ಉಳವಳ್ಳವರ, ಕಲ್ಮೇಶ ಲಿಗಾಡೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.