ಜಿಲ್ಲೆ

ಸರ್ಕಾರಿ ಆಸ್ಪತ್ರೆಗಳ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ

ಧಾರವಾಡ PRAJAKIRAN.COM : ಧಾರವಾಡ ಜಿಲ್ಲೆಯ ಜಿಲ್ಲಾಸ್ಪತ್ರೆ ಮತ್ತು ಎಲ್ಲಾ ತಾಲೂಕುಗಳ ಸರ್ಕಾರಿ ಆಸ್ಪತ್ರೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸಹಕಾರಿಯಾಗಿದೆ.

ಈ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆಯ ಸಾಧನೆ ಇದುವರೆಗೆ ತೃಪ್ತಿಕರವಾಗಿದೆ. ಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚು ಸಾಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನಾ ಅಭಿವೃದ್ಧಿ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯೋಜನೆಯ ಅನುಷ್ಠಾನದಲ್ಲಿ ಜಿಲ್ಲಾಸ್ಪತ್ರೆ ಕಳೆದ ೨ ತಿಂಗಳಿನಿಂದ ರಾಜ್ಯದಲ್ಲಿ ಮೊದಲ ಸ್ಥಾನ ಕಾಯ್ದುಕೊಂಡಿದೆ. ಹುಬ್ಬಳ್ಳಿಯ ಕಿಮ್ಸ್ ೪ನೇ ಸ್ಥಾನದಲ್ಲಿದೆ. ತಾಲೂಕು ಆಸ್ಪತ್ರೆಗಳಲ್ಲಿ ನವಲಗುಂದ ಆಸ್ಪತ್ರೆ ಉತ್ತಮ ಸ್ಥಾನ ಹೊಂದಿರುವುದು ಅಭಿನಂದನೀಯ.

ಬರುವ ದಿನಗಳಲ್ಲಿ ಕಾರ್ಯಕ್ಷಮತೆ ಹೆಚ್ಚಿಸಿಕೊಂಡು ಇನ್ನಷ್ಟು ಉನ್ನತ ಸ್ಥಾನಕ್ಕೆ ಏರಬೇಕು. ಆಸ್ಪತ್ರೆಗಳನ್ನು ನಮ್ಮ ಮನೆಗಳ ರೀತಿಯಲ್ಲಿ ಅಚ್ಚುಕಟ್ಟಾಗಿ ಇಟ್ಟುಕೊಳ್ಳಬೇಕು. ವೈದ್ಯಕೀಯ ಯಂತ್ರೋಪಕರಣಗಳು, ಕಟ್ಟಡಗಳ ನಿರ್ವಹಣೆಗೆ ಒತ್ತು ನೀಡಬೇಕು ಎಂದು ಸೂಚಿಸಿದರು.

ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ: ಶಶಿ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ೫೨ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ೧೧ ಖಾಸಗಿ ಆಸ್ಪತ್ರೆಗಳು ಸೇರಿ ಒಟ್ಟು ೬೪ ಆಸ್ಪತ್ರೆಗಳನ್ನು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ.

೨೦೧೮ ರ ಅಕ್ಟೋಬರ್ ನಿಂದ ೨೦೧೯ ರ ಡಿಸೆಂಬರ್ ೩೧ ರ ವರೆಗೆ ೧೨೨ ಕೇಂದ್ರಗಳ ಮೂಲಕ ೩,೪೩,೫೯೪ ಕಾರ್ಡ್ ಗಳನ್ನು ವಿತರಿಸಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಯಶವಂತ್ ಮದೀನಕರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ: ಶಿವಕುಮಾರ ಮಾನಕರ, ಡಾ: ಸುಜಾತಾ ಹಸವೀಮಠ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲೆಯ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Please follow and like us:

One Reply to “ಸರ್ಕಾರಿ ಆಸ್ಪತ್ರೆಗಳ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ”

Leave a Reply

Your email address will not be published. Required fields are marked *