ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಬಗ್ಗೆ ರಾಜ್ಯದ ಸಮ್ಮೀಶ್ರ ಸರ್ಕಾರ ನಿರ್ಲಕ್ಷ್ಯ ಧೋರಣೆಯನ್ನು ತಾಳಿರುವುದನ್ನು ಖಂಡಿಸಿ ನ. 27ರಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮಹಾನಗರ ಪಾಲಿಕೆ ವತಿಯಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಮಹಾನಗರ ಪಾಲಿಕೆ ಸದಸ್ಯ ವೀರಣ್ಣ ಸವಡಿ ತಿಳಿಸಿದ್ದಾರೆ.
ಅವರು ಗುರುವಾರ ನಗರದಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿ, ನ. 27ರಂದು ನಡೆಯುವ ಅಹೋರಾತ್ರಿ ಧರಣಿಯಲ್ಲಿ ಪಾಲಿಕೆ ಸದಸ್ಯರು, ಮೇಯರ್ ಹಾಗೂ ಉಪಮೇಯರ್ ಪಾಲ್ಗೊಳ್ಳಲಿದ್ದಾರೆ ಎಂದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಇಂದಿರಾ ಕ್ಯಾಂಟಿನ್ ಯೋಜನೆ ಕುರಿತು ಮಾತನಾಡಿ, ಇಂದಿರಾ ಕ್ಯಾಂಟಿನ್ ಯೋಜನೆಯಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುತ್ತೋ ಇಲ್ಲವೋ ಗೊತ್ತಿಲ್ಲ ಗುತ್ತಿಗೆದಾರರಿಗೆ ಮಾತ್ರ ಲಾಭವಾಗುತ್ತಿದೆ ಎಂದು ಅವರು ಆರೋಪಿಸಿದರು.
ಶೀಘ್ರವೇ ಇಂದಿರಾ ಕ್ಯಾಂಟಿನ್ ಯೋಜನೆಯಲ್ಲಿ ಸುವ್ಯವಸ್ಥೆಯನ್ನು ಜಾರಿಗೊಳಿಸಿ ಸಾರ್ವಜನಿಕರ ಹೆಸರಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ತಿಳಿಸಿದರು.
ಈ ಹಿಂದೆ ಇಂದಿರಾ ಕ್ಯಾಂಟಿನ್ ಆರಂಭಕ್ಕೆ ಆಗಮಿಸಿದ್ದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಅವರಿಗೆ ಹು-ಧಾ ಮಹಾನಗರ ಪಾಲಿಕೆಯ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಗಿದೆ. ಆದರೆ ಉಸ್ತುವಾರಿ ಸಚಿವರು ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು ಆದರೆ ಈವರೆಗೆ ಸ್ಪಂದಿಸಿಲ್ಲ. ನಿರ್ಲಕ್ಷ್ಯ ತೋರಿದ್ದಾರೆ ಎಂದು ದೂರಿದರು.
ಮಹಾನಗರ ಪಾಲಿಕೆ ಆರ್ಥಿಕ ವ್ಯವಸ್ಥೆ ಬುಡಮೇಲಾಗಿದೆ. ರಾಜ್ಯ ಸರಕಾರ ಅನುದಾನ ಸರಿಯಾದ ರೀತಿಯಲ್ಲಿ ಬಿಡುಗಡೆ ಮಾಡದೆ ಇರುವುದು ಮೂಲ ಕಾರಣವಾಗಿದೆ ಎಂದು ಕಿಡಿಕಾರಿದ ಅವರು ನಮಗೆ ಪಾಲಿಕೆ ಸಿಬ್ಬಂದಿಗಳಿಗೆ ವೇತನ ನೀಡಲು ಹಾಗೂ ಗುತ್ತಿಗೆದಾರರಿಗೆ ಬಾಕಿ ನೀಡಲು ಹಣ ಇಲ್ಲವಾಗಿದೆ. ಹಳೇಯ 40-50ಲಕ್ಷ ಅನುದಾನ ಬಿಡುಗಡೆಯಾಗದೇ ಇರುವ ಹಿನ್ನೆಲೆಯಲ್ಲಿ ಸವಾಯಿ ಗಂಧರ್ವ ಪ್ರೊಜೆಕ್ಟ್ ಕೂಡ ತಟಸ್ಥವಾಗಿದೆ ಎಂದು ಆರೋಪಿಸಿದರು.
ಇದೇ ರೀತಿಯಲ್ಲಿ ಮಹಾನಗರ ಪಾಲಿಕೆಯ ಸುಮಾರು ಯೋಜನೆಗಳು ಮೂಲೆಗುಂಪಾಗಿವೆ ಎಂದ ಅವರು ಮಹಾನಗರ ಪಾಲಿಕೆ ನಿವೃತ್ತ ನೌಕರರ ಪಿಂಚಣಿ ವೇತನ, ಸಿ.ಆರ್.ಎಫ್. ಅಡಿ 42 ಕೋಟಿ ಅನುದಾನ, ಇಂದಿರಾ ಕ್ಯಾಂಟಿನ್ ಯೋಜನೆಯ ಶೇ 70% ಮಹಾನಗರ ಪಾಲಿಕೆಯ ಷೇರು ಸೇರಿದಂತೆ ಹಲವಾರು ಬೇಡಿಕೆಯನ್ನು ಶೀಘ್ರವೇ ಬಗೆ ಹರಿಸಬೇಕು ಎಂದು ಆಗ್ರಹಿಸಿದರು.
ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಸಂಸದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ನೇತೃತ್ವದಲ್ಲಿ ಹುಬ್ಬಳ್ಳಿಯಿಂದ ಧಾರವಾಡದ ವರೆಗೆ ಪಾದಯಾತ್ರೆ ಕೂಡ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.