ಹುಬ್ಬಳ್ಳಿ Prajakiran.com : ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ ನಮ್ಮ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಅಪಾರ ಗೌರವವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ಅವರು ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರೀಯ ನಾಯಕರು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಈ ಬಗ್ಗೆ ಸುಳ್ಳು ಸುದ್ದಿಗೆಳಿಗೆ ಮಹತ್ವ ನೀಡಬಾರದು ಎಂದರು.
ಈಗಾಗಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ್ದಾರೆ ಎಂದರು.
ಸಿಎಂ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಹಿಂದೆ ರಾಜ್ಯಕ್ಕೆ ಬೇರೆ ಬೇರೆ ಕಾರ್ಯಕ್ರಮಗಳಿಗೆ ಆಗಮಿಸಿದ್ದ ವೇಳೆ ಈ ಕುರಿತು ಮಾತುಕತೆ ನಡೆಸಿದ್ದಾರೆ ಎಂದರು.
ಬಿಜೆಪಿ ಹೈಕಮಾಂಡ್ ಅವರ ಮೇಲೆ ವಿಶ್ವಾಸವಿಲ್ಲ ಎಂಬುದು ಸತ್ಯಕ್ಕೆ ದೂರವಾದವು. ಈ ಕುರಿತು ಯಾವುದೇ ಊಹಾಪೋಹಗಳಿಗೆ ಯಾರು ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಸಿಎಂ ಬಿಎಸ್ ವೈ ಅವರು ಮುಂದಿನ ಮೂರು ವರ್ಷಗಳ ಸಿಎಂ ಆಗಿ ಮುಂದುವರೆಯಲಿದ್ದಾರೆ. ಅವರ ನೇತೃತ್ವದಲ್ಲಿ ರಾಜ್ಯದ ಬಿಜೆಪಿ ಸರಕಾರ ಒಳ್ಳೆಯ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯಾರು ತ್ಯಾಗ ಮಾಡಬೇಕು. ಯಾರು ಪಕ್ಷ ಕಟ್ಟಬೇಕು ಎಂಬುದು ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದು, 16 ಸಚಿವ ಸ್ಥಾನಗಳ ಪೈಕಿ12 ಜನರ ಮಾಡಬೇಕು ಇಲ್ಲವೇ 16 ಮಾಡಬೇಕು ಎಂಬುದು ಸಿಎಂ ಪರಮಾಧಿಕಾರ ಎಂದು ಹೇಳಿದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪರ ಬ್ಯಾಟಿಂಗ್ ಮಾಡುವ ಮೂಲಕ ಕಳೆದ ಹಲವು ದಿನಗಳಿಂದ ಸಿಎಂ ಯಡಿಯೂರಪ್ಪ ಬದಲಾವಣೆ, ಹೈಕಮಾಂಡ್ ನಡೆ ಕುರಿತು ಎದ್ದಿದ್ದ ಹಲವು ಊಹಾಪೋಹಗಳಿಗೆ ತೆರೆ ಎಳೆಯಲು ಪ್ರಯತ್ನಿಸಿದಂತಾಗಿದೆ.
ಜೊತೆಗೆ ಸಿಎಂ ಪರ ಪ್ರಲ್ಹಾದ ಜೋಶಿ ಬ್ಯಾಟಿಂಗ್ ಮಾಡುವ ಮೂಲಕ ಯಡಿಯೂರಪ್ಪ ಜೊತೆಗೆ ಹೈಕಮಾಂಡ್ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ಬಿಜೆಪಿ ವಲಯದಲ್ಲಿ ಯಾವ ರೀತಿಯ ಪ್ರತಿಕ್ರಿಯೆಗಳು ದೊರೆಯುತ್ತವೆ ಎಂಬುದು ಕಾದು ನೋಡಬೇಕಿದೆ.