ನವದೆಹಲಿ : ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆಗಾಗಿ ರಾಷ್ಟ್ರೀಯ ಬಸವ ದಳದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ನೇತೃತ್ವದಲ್ಲಿ ಹೋರಾಟ ಮುಂದುವರೆದಿದೆ.
ನವದೆಹಲಿಯಲ್ಲಿ ನಡೆಯುತ್ತಿರುವ ಈ ಹೋರಾಟಕ್ಕೆ ಬೆಂಬಲಿಸಿ ರಾಜ್ಯದಿಂದ ಸಾವಿರಾರು ಜನರು ತೆರಳಿ, ಪ್ರತಿಭಟನೆಯಲ್ಲಿ ಭಾಗಿಯಾಗಿ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.
ಲಿಂಗಾಯತ ಧರ್ಮಕ್ಕೆ ಜೈನ, ಸಿಖ್ ರೀತಿಯಲ್ಲಿಯೇ ಪ್ರತ್ಯೇಕ ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಷ್ಟ್ರೀಯ ಬಸವ ದಳದ ಅಧ್ಯಕ್ಷೆ ಮಾತೆ ಮಹಾದೇವಿ, ರಾಜ್ಯದ ಲಿಂಗಾಯತ ಸಂಸದರು ನಿಷ್ಕ್ರಿಯಗೊಂಡಿದ್ದಾರೆ. ಅವರು ಸಂಸತ್ ನಲ್ಲಿ ಈ ಬಗ್ಗೆ ಧ್ವನಿಯನ್ನು ಎತ್ತುವಲ್ಲಿ ವಿಫಲವಾಗಿದ್ದಾರೆ ಎಂದು ದೂರಿದರು.
ಹೀಗಾಗಿ ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ನಮ್ಮ ರಾಜ್ಯ ಸರಕಾರ ಸಚಿವ ಸಂಪುಟ ಸಭೆಯಲ್ಲಿ ಸರ್ವಾನುಮತದಿಂದ ಕೊಂಡ ಪ್ರತ್ಯೇಕ ಧರ್ಮದ ಶಿಫಾರಸ್ಸನ್ನು ತಳ್ಳಿ ಹಾಕಿದೆ. ಇದು ಸರಿಯಾದ ಬೆಳವಣಿಗೆ ಅಲ್ಲ ಎಂದು ಅಸಮಾಧಾನ ಹೊರಹಾಕಿದರು.
ಈ ಬಗ್ಗೆ ಕೇಂದ್ರ ಸರಕಾರ ಈಗಲಾದರೂ ಎಚ್ಚೆತ್ತುಕೊಂಡು ನಮ್ಮ ಮನವಿಯನ್ನು ಪುನಃ ಪರಿಶೀಲಿಸಬೇಕು. ಈ ಬಗ್ಗೆ ನಮ್ಮ ರಾಜ್ಯದ ಸಂಸದರು ತಮ್ಮ ನಿಲುವು ಸ್ಪಷ್ಟಪಡಿಸಬೇಕು. ಇಲ್ಲದಿದ್ದರೆ ಇದರ ಪರಿಣಾಮವನ್ನು ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.