BREAKING NEWS(click on the news)----------
  • ಎರಡು ರಾಷ್ಟ್ರೀಯ ಪಕ್ಷಗಳಿಂದ ಉತ್ತರ ಕರ್ನಾಟಕ ಅಭಿವೃದ್ಧಿಗೆ ಉದಾಸೀನತೆ : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ


    Date : 2017-11-14 SHARE

    ಧಾರವಾಡ : ಉತ್ತರ ಕರ್ನಾಟಕ ಭಾಗದ ಜಲ್ವಂತ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಸಂಪೂರ್ಣವಾಗಿ ವಿಫಲವಾಗಿವೆ. ಅಭಿವೃದ್ಧಿಯ ವಿಷಯದಲ್ಲಿ ತೀವ್ರ ಉದಾಸೀನತೆ ತೋರಿದ್ದಾರೆ. ಈ ನಿಟ್ಟಿನಲ್ಲಿ ಜೆಡಿಎಸ್‍ನಿಂದ ಸದನದ ಒಳಗೆ ಹಾಗೂ ಹೊರಗೆ ಗಂಭೀರ ಹೋರಾಟ ನಡೆಸುವ ಮೂಲಕ ಈ ಭಾಗದ ಜನತೆಗೆ ನ್ಯಾಯ ದೊರಕಿಸಿ ಕೊಡಲು ಪ್ರಯತ್ನಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ಹೇಳಿದರು. ಅವರು ನಗರದ ಹೊರವಲಯದಲ್ಲಿರುವ ನರೇಂದ್ರ ಬೈ ಪಾಸ್‍ನಲ್ಲಿ ಮಂಗಳವಾರ ಬೆಳಗ್ಗೆ ಧಾರವಾಡದಿಂದ ಬೆಳಗಾವಿಯವರೆಗೆ ಹಮ್ಮಿಕೊಂಡಿದ್ದ ಕರ್ನಾಟಕ ವಿಕಾಸ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಕರ್ನಾಟಕ ವಿಕಾಸ ಯಾತ್ರೆಯಲ್ಲಿ ಉತ್ತರ ಕರ್ನಾಟಕ ಭಾಗದ ರೈತರ ಜ್ವಲಂತ ಸಮಸ್ಯೆಯಾದ ಮಹದಾಯಿ, ಕಳಸಾ-ಬಂಡೂರಿ ಜಾರಿ, ರೈತರ ಸಂಪೂರ್ಣ ಸಾಲಮನ್ನಾ, ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯ ಪರಿಹಾರ ಬಿಡುಗಡೆ, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ, ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಸೇರಿದಂತೆ ಇನ್ನಿತರ ಬೇಡಿಕೆಗಳಿಗೆ ಸ್ಪಂದಿಸಲು ವಿಫಲವಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮುಂಬರುವ 2018ರ ವಿಧಾನ ಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವ ಮೂಲಕ ಎರಡು ರಾಷ್ಟ್ರೀಯ ಪಕ್ಷಗಳಿಗೆ ಮನೆಗೆ ಕಳುಹಿಸಿ, ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ಅನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು. ಕಳೆದ ಹಲವು ದಶಕಗಳಿಂದ ತೀವ್ರ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ಕಡೆಗಣಿಸಿರುವ ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿಯವರ ಸರ್ಕಾರ ಹಾಗೂ ರಾಜ್ಯದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗಾಗಲೇ ಕರ್ನಾಟಕ ವಿಕಾಸ ಯಾತ್ರೆಯ ಮೂಲಕ ರಾಜ್ಯದೆಲ್ಲಡೆ ಸಂಚರಿಸಿ, ಸಮರ ಸಾರಲಾಗಿದೆ. ಜನರ ಆರ್ಶೀವಾದದ ಫಲವಾಗಿ 2018ರಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನವಲಗುಂದ ಶಾಸಕ ಹಾಗೂ ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷರಾದ ಎನ್.ಹೆಚ್. ಕೋನರಡ್ಡಿ ಮಾತನಾಡಿ, ಕೇಂದ್ರ ಸರ್ಕಾರ ತಮಿಳುನಾಡಿಗೆ ಸ್ಪಂದಿಸುವ ಮಾದರಿಯಲ್ಲಿ ಕರ್ನಾಟಕಕ್ಕೆ ನ್ಯಾಯ ನೀಡಬೇಕಾದರೆ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ಆ ಮೂಲಕ ನಾಡಿನ ಎಲ್ಲ ನೆಲ, ಜಲ ಹಾಗೂ ಭಾಷೆ ಸಮಸ್ಯೆಗಳಿಗೆ ತೆರೆ ಎಳೆಯಲು ಸಾಧ್ಯ, ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದರೆ ಉತ್ತರ ಕರ್ನಾಟಕ ಭಾಗದ ಮಹದಾಯಿ, ಕಳಸಾ-ಬಂಡೂರಿ ಸಮಸ್ಯೆಗೆ ತೆರೆ, ರೈತರ ಸಂಪೂರ್ಣ ಸಾಲಮನ್ನಾ ಸೇರಿದಂತೆ ರೈತರ ಎಲ್ಲ ಸಂಕಷ್ಟಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಲಾಗುವುದು ಎಂದರು. ನಾಡಿನ ಎಲ್ಲ ರೈತರು ತಲೆ ಎತ್ತಿ ಸ್ವಾಭಿಮಾನದಿಂದ ಬದುಕಬೇಕೆಂದರೆ ಕುಮಾರಸ್ವಾಮಿಯವರು ಈ ನಾಡಿನ ಮುಖ್ಯಮಂತ್ರಿಯಾಗಬೇಕು.ಅದಕ್ಕೆ ನಾವು ನೀವೆಲ್ಲರೂ ಆರ್ಶೀವಾದ ಮಾಡಬೇಕು ಎಂದು ಶಾಸಕ ಎನ್.ಹೆಚ್. ಕೋನರಡ್ಡಿ ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಎಸ್. ಹೊರಟ್ಟಿ, ರಾಜ್ಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ, ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಾಜಣ್ಣ ಕೊರವಿ, ಜಿಲ್ಲಾ ಕಾರ್ಯಾಧ್ಯಕ್ಷ ಬಿ.ಬಿ. ಗಂಗಾಧರಮಠ, ನವಲಗುಂದ ತಾಲೂಕು ಜೆಡಿಎಸ್ ಅಧ್ಯಕ್ಷ ವೀರಣ್ಣ ನೀರಲಗಿ, ಮಹಾನಗರ ಪಾಲಿಕೆ ಸದಸ್ಯ ಶ್ರೀಕಾಂತ ಜಮನಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.