BREAKING NEWS(click on the news)----------
  • ಬೆಳಗಾವಿ ವಿಭಾಗ ಮಟ್ಟದ ಜೆಡಿಎಸ್ ರೈತ ಸಮಾವೇಶ ಯಶಸ್ವಿಗೊಳಿಸಲು ರಾಜಣ್ಣ ಕೊರವಿ ಮನವಿ


    Date : 2017-11-13 SHARE

    ಹುಬ್ಬಳ್ಳಿ : ಉತ್ತರ ಕರ್ನಾಟಕದ ಜೀವನಾಡಿಯಾದ ಮಹದಾಯಿ, ಕಳಸಾ-ಬಂಡೂರಿ ನಾಲಾ ಜೋಡಣೆ ಹಾಗೂ ರೈತರ ಸಂಪೂರ್ಣ ಸಾಲಮನ್ನಾಕ್ಕೆ ಒತ್ತಾಯಿಸಿ ಬೆಳಗಾವಿಯಲ್ಲಿ ನವೆಂಬರ್ 14ರಂದು ಮಂಗಳವಾರ ಬೆಳಗ್ಗೆ 12 ಗಂಟೆಗೆ ಜೆಡಿಎಸ್ ಪಕ್ಷದ ವತಿಯಿಂದ ಸಿಪಿಎಡ್ ಮೈದಾನದಲ್ಲಿ ಹಮ್ಮಿಕೊಂಡಿರುವ ಉತ್ತರ ಕರ್ನಾಟಕದ ಸ್ವಾಭಿಮಾನಿ ಕನ್ನಡಿಗರ ಯಾತ್ರೆಯ ಸಮಾರೋಪ ಹಾಗೂ ಬೆಳಗಾವಿ ವಿಭಾಗಮಟ್ಟದ ರೈತ ಸಮಾವೇಶದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾಧ್ಯಕ್ಷ ರಾಜಣ್ಣ ಕೊರವಿ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಉತ್ತರ ಕರ್ನಾಟಕದ ಸ್ವಾಭಿಮಾನಿ ಕನ್ನಡಿಗರ ಯಾತ್ರೆಯ ಸಮಾರೋಪ ಸಮಾರಂಭಕ್ಕಾಗಿ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಉತ್ತರ ಕರ್ನಾಟಕದ ಸ್ವಾಭಿಮಾನಿ ಕನ್ನಡಿಗರ ಯಾತ್ರೆಯೂ ಈಗಾಗಲೇ ವಿಜಯಪುರ, ಬಾಗಲಕೋಟೆ, ಚಿಕ್ಕೋಡಿ ಮೂಲಕ ಬೆಳಗಾವಿ ತಲುಪಲಿದ್ದು, ಅದರ ಸಮಾರೋಪ ಸಮಾರಂಭದ ಅಂಗವಾಗಿ ಜೆಡಿಎಸ್‍ನಿಂದ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೆಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಅಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಹೊರಟ್ಟಿ, ನವಲಗುಂದ ಶಾಸಕ ಎನ್.ಹೆಚ್. ಕೋನರಡ್ಡಿ ಅವರು ಸೇರಿದಂತೆ ಪಕ್ಷದ ಅನೇಕ ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಈ ಸಮಾವೇಶದಲ್ಲಿ ಜೆಡಿಎಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು. ಈ ಸಮಾವೇಶದಲ್ಲಿ ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷಿಸಿರುವ ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿಯವರ ಸರ್ಕಾರ ಹಾಗೂ ರಾಜ್ಯದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಲಾಗುವುದು. ಈಗಾಗಲೇ ರಾಜ್ಯದ ವಿವಿಧೆಡೆ ಯಶಸ್ಸು ಕಂಡಿರುವ ಬೃಹತ್ ರೈತ ಸಮಾವೇಶ ಇದೀಗ ಉತ್ತರ ಕರ್ನಾಟಕದ ಬೆಳಗಾವಿಯಲ್ಲೂ ಕೂಡ ಆಯೋಜಿಸಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ