ಹುಬ್ಬಳ್ಳಿಯಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಕಾರ್ಯಕಾರಣಿ ಸಭೆ 16ರಂದು : ರಾಜಣ್ಣ ಕೊರವಿ
Date : 2017-11-15 SHARE
ಹುಬ್ಬಳ್ಳಿ : ಇಲ್ಲಿಯ ಚವ್ಹಾಣ ಗಾರ್ಡನ್ನಲ್ಲಿ ನವೆಂಬರ್ 16ರಂದು ಗುರುವಾರ ಬೆಳಗ್ಗೆ 11.30ಕ್ಕೆ ಜೆಡಿಎಸ್ ಪಕ್ಷದ ರಾಜ್ಯ ಕಾರ್ಯಕಾರಣಿ ಸಭೆ ಜರುಗಲಿದೆ. ಮಾಜಿ ಪ್ರಧಾನಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೆಗೌಡರ ಮಾರ್ಗದರ್ಶನದಲ್ಲಿ ಸಭೆ ನಡೆಯಲಿದ್ದು, ಸಭೆಯ ಅಧ್ಯಕ್ಷತೆಯನ್ನು ಮಾಜಿಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ ಕುಮಾರಸ್ವಾಮಿ ಅವರು ವಹಿಸಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ರಾಜಣ್ಣ ಕೊರವಿ ತಿಳಿಸಿದ್ದಾರೆ. ಸಭೆಯಲ್ಲಿ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಎಸ್.ಹೊರಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಆನಂತರ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ನಾರಾಯಣರಾವ್ ಅವರು ಪಕ್ಷದ ಕಾರ್ಯಚಟುವಟಿಕೆಗಳ ಕುರಿತು ವರದಿ ಮಂಡಿಸಲಿದ್ದು, ಪಕ್ಷದ ಖಜಾಂಚಿಯಾದ ಕೆ.ವಿ. ನಾರಾಯಣಸ್ವಾಮಿ ಅವರು ಪಕ್ಷದ ಆಯ್ಯವ್ಯಯ ವರದಿ ವಾಚಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಜೆಡಿಎಸ್ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಜೆಡಿಎಸ್ ಪಕ್ಷದ ಮಾಜಿ ಸಚಿವರು, ಶಾಸಕರು, ಸಂಸದರು, ಮಾಜಿ ಶಾಸಕರು ಹಾಗೂ ವಿವಿಧ ಘಟಕದ ರಾಜ್ಯ ಅಧ್ಯಕ್ಷರು, ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ ಎಂದು ಮಹಾನಗರ ಜಿಲ್ಲಾಧ್ಯಕ್ಷ ರಾಜಣ್ಣ ಕೊರವಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಾನಗರ ಜಿಲ್ಲಾ ಜೆಡಿಎಸ್ ನೂತನ ಕಚೇರಿ ಉದ್ಘಾಟನೆ ಇಂದು : ಹುಬ್ಬಳ್ಳಿಯ ನೆಹರು ಮೈದಾನದ ಮುಖ್ಯದ್ವಾರದ ಸಮೀಪದ ಕೃಷ್ಣ ಭವನ ಎದುರುಗಡೆಯಿರುವ ಕನಕ ಕಾಂಪ್ಲೆಕ್ಸ್ನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಜೆಡಿಎಸ್ ನೂತನ ಕಚೇರಿ ಉದ್ಘಾಟನಾ ಸಮಾರಂಭ ನವೆಂಬರ್ 16ರಂದು ಮಧ್ಯಾಹ್ನ 3 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕಚೇರಿ ಉದ್ಘಾಟನೆಯನ್ನು ಮಾಜಿ ಪ್ರಧಾನಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೆಗೌಡರು, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ ಕುಮಾರಸ್ವಾಮಿ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಹೊರಟ್ಟಿ, ನವಲಗುಂದ ಶಾಸಕ ಎನ್.ಹೆಚ್. ಕೋನರಡ್ಡಿ ಸೇರಿದಂತೆ ಪಕ್ಷದ ಅನೇಕರು ಮುಖಂಡರು ಭಾಗಿಯಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಪಕ್ಷದ ಕಚೇರಿ ಉದ್ಘಾಟನಾ ಸಮಾರಂಭಕ್ಕೆ ಜೆಡಿಎಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶೋಭೆ ತರಬೇಕು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ರಾಜಣ್ಣ ಕೊರವಿ ಮನವಿ ಮಾಡಿದ್ದಾರೆ.