ಮಾತೃಪೂರ್ಣ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಅನ್ಯಾಯ ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು
Date : 2017-11-29 SHARE
ಧಾರವಾಡ : ಮಾತೃಪೂರ್ಣ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಅನ್ಯಾಯವೆಸಗಲಾಗುತ್ತಿದೆ ಎಂದು ಆರೋಪಿಸಿ ಧಾರವಾಡದಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಬೀದಿಗಿಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾತೃಪೂರ್ಣ ಯೋಜನೆ ಜಾರಿಗೊಳಿಸಲು ಒದಗಿಸಬೇಕಾದ ಅಗತ್ಯ ಮೂಲ ಸೌಕರ್ಯಗಳ ಸಿದ್ಧತೆ ಮಾಡಿಕೊಳ್ಳದೆ ಹಾಗೂ ಆರ್ಥಿಕ ಸಂಕಷ್ಟದ ನಡುವೆ ಯೋಜೆನ ಆರಂಭೀಸುವ ಮೂಲಕ ನಮ್ಮನ್ನು ಬಲಿಪಶು ಮಾಡುತ್ತಿದೆ ಎಂದು ಘೋಷಣೆ ಕೂಗಿ ತಮ್ಮ ಅಸಮಧಾನ ವ್ಯಕ್ತಪಡಿಸಿದರು. ಮಾರುಕಟ್ಟೆಯಲ್ಲಿ ಮೊಟ್ಟೆ ದರ 6.50 ರೂ. ಯಿಂದ 7 ರೂಪಾಯಿವರೆಗೆ ಇದೆ. ಆದರೆ ಸರ್ಕಾರ ಕೇವಲ ನಾಲ್ಕು ರೂಪಾಯಿ ನೀಡುತ್ತಿದೆ. ಇದರಿಂದಾಗಿ ಹೆಚ್ಚುವರಿ ಹಣವನ್ನು ನಾವು ಕೈಯಿಂದ ಭರಿಸಬೇಕಾಗುತ್ತಿದೆ. ನಮಗೆ ಇದು ಸಾಧ್ಯವಾಗುತ್ತಿಲ್ಲ ಇದರಿಂದಾಗಿ ಅಂಗನವಾಡಿಗೆ ಆಗಮಿಸುವ ಪ್ರತಿಯೊಂದು ಮಗುವಿಗೆ ಮೊಟ್ಟೆ ವಿತರಣೆ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಹೊರೆಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಅಂಗನವಾಡಿಗಳಿಗೆ ಮುಂಗಡವಾಗಿ ಹಣ ಪಾವತಿಸಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ಜಿಲ್ಲಾಧ್ಯಕ್ಷೆ ನೂರ್ ಜಹಾನ್ ಒತ್ತಾಯಿಸಿದರು. ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಏಕಪಕ್ಷೀಯ ನಿರ್ಧಾರ ಕೈಗೊಂಡ ಪರಿಣಾಮ ಇಂದು ನಾವೆಲ್ಲ ಆರ್ಥಿಕ ಸಂಕಷ್ಟ ಎದುರಿಸಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಹೀಗಾಗಿ ಕೂಡಲೇ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತಯರ ಮೇಲೆ ದಬ್ಬಾಳಿಕೆ ಮಾಡುವುದನ್ನು ನಿಲ್ಲಿಸಿ, ಯೋಜನೆಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ವೀರಮ್ಮ ತುರಖಾಣಿ, ಎನ್.ಎ. ಖಾಜಿ, ಲತಿಫಾ ಬಾಗಲಕೋಟಿ, ಅಕ್ಕಮ್ಮ ಬಡ್ನಿ ಸೇರಿದಂತೆ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.