ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಜೆಡಿಯು ದೂರು
Date : 2018-05-02 SHARE
ಧಾರವಾಡ : ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಸ್ಮಾಯಿಲ್ ತಮಟಗಾರ ತಮಗೆ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವಂತೆ ಬೆದರಿಕೆ ಹಾಕಿದ್ದಾರೆ ಎಂದು ಜೆಡಿಯು ಅಭ್ಯರ್ಥಿ ಜಾವೇದ್ ಅಹ್ಮದ್ ಅಬ್ದುಲ್ ಖಾದರ್ ಬೆಳಗಾಂವಕರ್ ಆರೋಪಿಸಿದ್ದಾರೆ. ಈ ಕುರಿತು ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿರುವ ಅವರು, ತಮಗೆ ಜೀವ ಬೆದರಿಕೆ ಇದ್ದು ಸೂಕ್ತ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ನನ್ನ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಮನೆಯ ಕಿಟಿಕಿಗಳು ಒಡೆದು ಹೋಗಿವೆ. ನನಗೆ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ ಮುಕ್ತವಾಗಿ ಓಡಾಡಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ. ಅಲ್ಲದೆ, ಈ ಕುರಿತು ಧಾರವಾಡ ಉಪನಗರ ಪೊಲೀಸ್ ಠಾಣೆ ಪೊಲೀಸರು ಈವರೆಗೆ ದೂರು ದಾಖಲಿಸಿಕೊಂಡಿಲ್ಲ.ಈ ಹಿನ್ನಲೆಯಲ್ಲಿ ಪೊಲೀಸ್ ಮಹಾ ನಿರ್ದೇಶಕರಿಗೆ ಹಾಗೂ ಚುನಾವಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಅವರು ವಿವರಿಸಿದ್ದಾರೆ.