ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಿದ ಕಾಂಗ್ರೆಸ್ಸಿಗರು !
Date : 2018-05-15 SHARE
ಧಾರವಾಡ : ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಡಿಕೊಂಡಿದ್ದಾರೆ. ಜಿಲ್ಲೆಯ ಎಳು ವಿಧಾನ ಸಭಾ ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ತದನಂತರ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ಕೂಡ ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದು ಧಾರವಾಡ ಹೊರ ವಲಯದಲ್ಲಿರುವ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದ್ದು, ಕಲ್ಲು ತೂರಿದ ಬೆನ್ನಲ್ಲೇ ಅವರ ಬೆನ್ನಟ್ಟಿದ್ದ ಬಿಜೆಪಿ ಮುಖಂಡರು ಅವರನ್ನುಅಲ್ಲಿಂದ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆನಂತರ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಧ್ವಜ ಸುಟ್ಟು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಘಟನೆ ಮಾಹಿತಿ ಅರಿತ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಯಶಸ್ವಿಯಾದರು. ಈ ಘಟನೆ ಕುರಿತು ಪಾಲಿಕೆ ಸದಸ್ಯ ಶಂಕರ ಶಳಕೆ ಪ್ರಜಾಕಿರಣದೊಂದಿಗೆ ಮಾತನಾಡಿ, ಹುಬ್ಬಳ್ಳಿ ಪೂರ್ವ ಶಾಸಕ ಪ್ರಸಾದ ಅಬ್ಬಯ್ಯ ಬೆಂಬಲಿಗರು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದರು.