ಮೇ ೧೫ ರಂದು ನಿಷೇಧಾಜ್ಞೆ ಜಾರಿ
Date : 2018-05-11 SHARE
ಧಾರವಾಡ : ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತ ಎಣಿಕೆ ದಿನವಾದ ಮೇ ೧೫ ರ ಬೆಳಿಗ್ಗೆ ೬ ರಿಂದ ೧೬ ರ ಬೆಳಿಗ್ಗೆ ೬ ಗಂಟೆಯವರೆಗೆ ಸಿ.ಆರ್.ಪಿ.ಸಿ ೧೯೭೩ ರ ಕಲಂ ೧೪೪ ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಡಾ: ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ. ಮೆರವಣಿಗೆ ಅಥವಾ ೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ,ಸಾರ್ವಜನಿಕ ಸಭೆ ಸಮಾರಂಭಗಳನ್ನು ನಿಷೇಧಿಸಲಾಗಿದೆ. ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತçವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೆÃಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಈ ಆದೇಶವು ಅಂತ್ಯಕ್ರಿಯೆ ಮೆರವಣಿಗೆ ಮತ್ತು ಇನ್ನಿತರ ಕಾರಣಗಳಿಗಾಗಿ ಅನುಮತಿ ಪಡೆದು ನಡೆಸಿದ ಮೆರವಣಿಗೆಗಳಿಗೆ ಅನ್ವಯಿಸುವುದಿಲ್ಲ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ.೧೮೮ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ವಿವರಿಸಿದ್ದಾರೆ.