ಹಿರಿಯ ಸಾಹಿತಿ ಗಿರಡ್ಡಿ ಗೋವಿಂದರಾಜ ಇನ್ನಿಲ್ಲ
Date : 2018-05-11 SHARE
ಧಾರವಾಡ : ಹಿರಿಯ ವಿಮರ್ಶಕರು ಹಾಗೂ ಧಾರವಾಡ ಸಾಹಿತ್ಯ ಸಂಭ್ರಮದ ರೂವಾರಿಗಳಲ್ಲಿ ಒಬ್ಬರಾಗಿದ್ದ ಗಿರಡ್ಡಿ ಗೋವಿಂದರಾಜ ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಧಾರವಾಡದಲ್ಲಿ ಕಲ್ಯಾಣ ನಗರದಲ್ಲಿರುವ ಅವರ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಸೇರಿಸುವಾಗ ಮಾರ್ಗಮಧ್ಯಯೇ ಸಾವನ್ನಪ್ಪಿದರು. ಅವರು ೧೯೩೯ರಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ಜನಿಸಿದ ಅವರು ಅಲ್ಲಿಯೇ ಪ್ರಾಥಮಿಕ ಶಿಕ್ಷಣ ಪೂರೈಸಿ, ಪ್ರೌಢ ಶಿಕ್ಷಣ ಹಾಗೂ ಉನ್ನತ ಶಿಕ್ಷಣಕ್ಕಾಗಿ ಧಾರವಾಡಕ್ಕೆ ಆಗಮಿಸಿದ್ದರು. ಧಾರವಾಡದ ಕರ್ನಾಟಕ ಕಾಲೇಜ್ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದಲ್ಲಿಯೇ ಶಿಕ್ಷಣ ಪಡೆದು ಅಲ್ಲಿಯೇ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಅನಂತರ ಮುಖ್ಯಸ್ಥರಾಗಿ ಸೇವೆಯಿಂದ ನಿವೃತ್ತಿಯಾಗಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದ ಅವರು ಐವತ್ತು ವರ್ಷಗಳ ಕಾಲ ಸಾಹಿತ್ಯ ಕೃಷಿಯಲ್ಲಿ ನಿರತರಾಗಿದ್ದರು. ಅವರ ಅಕಾಲಿಕ ನಿಧನ ಕನ್ನಡ ಸ್ವಾರಸತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.