ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್ ನಿವಾಸದ ಮುಂದೆ ಪ್ರತಿಭಟನೆ
Date : 2018-05-17 SHARE
ರಾಯ ಚೂರು: ಕಾಂಗ್ರೆಸ್ ಪಕ್ಷಕ್ಕೆ ಕೈ ಕೊಟ್ಟು ಯಾರ ಕೈಗೂ ಸಿಗದೆ ಕಾಣೆಯಾಗಿರುವ ರಾಯಚೂರು ಜಿಲ್ಲೆಯ ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್ ಅವರ ಮಸ್ಕಿಯ ನಿವಾಸದ ಮುಂದೆ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಣ್ಣ ಇರಬಗೇರಾ ಎಚ್ಚರಿಸಿದ್ದಾರೆ. ಅವರು ಗುರುವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆರೋಗ್ಯ ಸರಿಯಿಲ್ಲದಿದ್ದರೆ ಪಕ್ಷದ ನಾಯಕರಿಗೆ ಮಾಹಿತಿ ನೀಡಬೇಕಾಗಿತ್ತು. ಅದನ್ನು ಮಾಡದಿರುವ ಅವರ ನಿಲುವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಹೀಗಾಗಿ ಅವರ ಮನೆ ಮುಂದೆ ಸಂಸದ ಬಿ.ವಿ.ನಾಯಕ, ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದರು. ಶಾಸಕಾಂಗ ಸಭೆಯಲ್ಲಿ ಪಾಲ್ಗೊಂಡ ನಂತರ ಸಂಜೆ 4ರಿಂದ ಪ್ರತಾಪಗೌಡ ಪಾಟೀಲ್ ಈವರೆಗೆ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಅವರ ಆತ್ಮೀಯರ ದೂರವಾಣಿ ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ಅವರಿಗೆ ಟಿಕೆಟ್ ನೀಡಿದ್ದು, ಪಕ್ಷದ ಕಾರ್ಯಕರ್ತರ ಶ್ರಮದಿಂದ ಅವರು ಗೆಲುವು ಸಾಧಿಸಿದ್ದಾರೆ. ಸುಸಂಸ್ಕೃತ ವ್ಯಕ್ತಿಯಾಗಿರುವ ಅವರು ಯಾವುದೇ ಆಸೆ, ಆಮಿಷಕ್ಕೆ ಬಲಿಯಾಗದೆ ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದರು.