ಪಿಎಸ್ಐಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Date : 2018-05-20 SHARE
ಧಾರವಾಡ : ಪಿಎಸ್ ಐಯೊಬ್ಬರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಧಾರವಾಡ ತಾಲೂಕಿನ ಲಕಮಾಪೂರದಲ್ಲಿ ನಡೆದಿದೆ. ಗರಗ ಪೊಲೀಸ್ ಠಾಣೆಯ ಪಿಎಸ್ಐ ಸಂಗಮೇಶ ಪಾಲಬಾವಿ ಅವರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದರು. ಲಕಮಾಪೂರ ಗ್ರಾಮದಲ್ಲಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ತಿಕ್ಕಾಟ ನಡೆದ ಮಾಹಿತಿ ಅರಿತು ಗ್ರಾಮಕ್ಕೆ ಭೇಟಿ ನೀಡಿದ್ದ ಅವರು ಲಘು ಲಾಠಿ ಪ್ರಹಾರ ನಡೆಸಿ, ಜನರನ್ನು ಚದುರಿಸಿದ್ದರು. ಈ ಹಿನ್ನಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಉದ್ದೇಶಪೂರ್ವಕವಾಗಿ ಬಿಜೆಪಿ ಕಾರ್ಯಕರ್ತರನ್ನು ಗುರಿ ಮಾಡಲಾಗಿದೆಎಂದು ದೂರಿದರು. ಅಲ್ಲದೆ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸುವಂತೆ ಪಟ್ಟು ಹಿಡಿದರು. ಕೊನೆಗೆ ಮಧ್ಯರಾತ್ರಿ ವೇಳೆ ಲಕಮಾಪೂರ ಗ್ರಾಮಕ್ಕೆ ಭೇಟಿ ನೀಡಿದ ಸಿಪಿಐ ಪ್ರಶಾಂತ ನಾಯ್ಕ, ಡಿಎಸ್ಪಿ ಬಿ.ಪಿ. ಚಂದ್ರಶೇಖರ ಅವರು, ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಿರುವುದರಿಂದ ಗುಂಪು ಚದುರಿಸಿದ್ದಾರೆ. ಇದರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪ್ರಶ್ನೆಯಿಲ್ಲ. ನಾವು ಯಾವುದೇ ಪಕ್ಷಪಾತ ಮಾಡುವ ಪ್ರಶ್ನೆಯಿಲ್ಲ. ತಿಳಿಯದೆಮಾಡಿದ ತಪ್ಪನ್ನು ಮನ್ನಿಸಬೇಕು ಎಂದು ಗ್ರಾಮಸ್ಥರಿಗೆ ವಸ್ತು ಸ್ಥಿತಿ ಮನವರಿಕೆ ಮಾಡಿಕೊಟ್ಟು ಪರಿಸ್ಥಿತಿ ತಿಳಿಗೊಳಿಸಿದರು. ಆನಂತರ ಗ್ರಾಮಸ್ಥರು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.