ರಾಜ್ಯ

84ನೇ ಕನ್ನಡ ಸಾಹಿತ್ಯ ಸಮ್ಮೇಳನ : ಸ್ಥಳ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ

ಧಾರವಾಡ : ಧಾರವಾಡದಲ್ಲಿ ಜನೇವರಿ 4, 5 ಮತ್ತು 6 ರಂದು ಜರುಗಲಿರುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುತ್ತಿರುವ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿನ ಕ್ರೀಡಾಂಗಣ, ಕಟ್ಟಡಗಳು ಹಾಗೂ ಇತರ ಸ್ಥಳಗಳನ್ನು ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

ಮಂಗಳವಾರ ಮಧ್ಯಾಹ್ನ ಕೃಷಿ ವಿಶ್ವವಿದ್ಯಾಲಯದ ಮುಖ್ಯ ಕ್ರೀಡಾಂಗಣಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆ, ಮಾಧ್ಯಮ ಕೇಂದ್ರ, ಸದಸ್ಯರ ನೋಂದಣಿ ಕೇಂದ್ರ, ಸಾಹಿತ್ಯ ಸಮ್ಮೇಳನ ಮಾಹಿತಿ ಕೇಂದ್ರ, ಊಟದ ಸ್ಥಳ, ಪುಸ್ತಕ ಮಾರಾಟ ಮಳಿಗೆ, ಪುಸ್ತಕ ಪ್ರದರ್ಶನ ಮಳಿಗೆ, ವಾಹನ ಪಾರ್ಕಿಂಗ್ ಸ್ಥಳ ಸೇರಿದಂತೆ ವಿವಿಧ ಸ್ಥಳಗಳನ್ನು ಪರಿಶೀಲಿಸಿ ಆಯಾ ಸಮಿತಿಗಳ ಕಾರ್ಯಾಧ್ಯಕ್ಷರಿಂದ ಮಾಹಿತಿ ಪಡೆದರು.

ನಂತರ ಸುದ್ಧಿಗಾರರನ್ನು ಉದ್ದೇಶಿಸಿ ಮಾತನಾಡಿದ ದೀಪಾ ಚೋಳನ್, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿಸಲು ಜಿಲ್ಲಾಡಳಿತ ಈಗಾಗಲೇ ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕಾರ್ಯಕ್ರಮದ ಮುಖ್ಯ ವೇದಿಕೆಯನ್ನು ಕ್ರೀಡಾಂಗಣದಲ್ಲಿ ನಿರ್ಮಿಸಲಾಗುವುದು. ವೇದಿಕೆಯ ಸಮೀಪದಲ್ಲಿ ಸುಸಜ್ಜಿತ ಮಾಧ್ಯಮ ಕೇಂದ್ರವನ್ನು ಸ್ಥಾಪಿಸಲಾಗುವುದು. ಸಭಿಕರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಮೈದಾನದ ಸುತ್ತ ಕಲ್ಪಿಸಲಾಗುವುದು ಎಂದರು.

ಮುಖ್ಯ ವೇದಿಕೆಯ ಮುಂಭಾಗದಲ್ಲಿ ಅಂದರೆ ರೈತ ಸೇವಾ ಕೇಂದ್ರದ ಪಕ್ಕದ ಜಾಗೆಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಬರುವ ಸದಸ್ಯರಿಗೆ ನೊಂದಣಿ ಕೇಂದ್ರಗಳನ್ನು ಮತ್ತು ಸಾಹಿತ್ಯ ಸಮ್ಮೇಳನದ ಮಾಹಿತಿ ಕೇಂದ್ರವನ್ನು ತೆರೆಯಲಾಗುವುದು. ವಿಶ್ವವಿದ್ಯಾಲಯದ ಮುಖ್ಯ ಕಟ್ಟಡಕ್ಕೆ ಹೋಗುವ ದಾರಿಯ ಮಧ್ಯದಲ್ಲಿರುವ ಕಟ್ಟಡದಲ್ಲಿ ಪುಸ್ತಕ ಮಳಿಗೆ ಮತ್ತು ಅದರ ಪಕ್ಕದ ಜಾಗೆಯಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಹಾಗೂ ಅದರ ಮುಂದಿರುವ ಖಾಲಿ ಜಾಗದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲು ಚಿಂತಿಸಲಾಗಿದೆ ಎಂದರು.

ಸಾಹಿತ್ಯ ಸಮ್ಮೇಳನಕ್ಕೆ ಲಕ್ಷಾಂತರ ಜನ ಆಗಮಿಸುವುದರಿಂದ ಯಾವುದೇ ಕೊರತೆ, ನ್ಯೂನತೆಗಳು ಉಂಟಾಗದಂತೆ ಜಾಗೃತೆ ವಹಿಸಲು ಸಮಿತಿಯ ಕಾರ್ಯಾಧ್ಯಕ್ಷರಿಗೆ ಸೂಚಿಸಲಾಗಿದೆ. ಸಂಬಂಧಿತ ಇಲಾಖೆಯ ಅಧಿಕಾರಿಗಳು ಕಾರ್ಯಸೂಚಿಯಂತೆ ಈಗಾಗಲೇ ಕೆಲಸ ಆರಂಭಿಸಿದ್ದಾರೆ. ಮುಖ್ಯ ವೇದಿಕೆಯ ಮುಂಭಾಗದಲ್ಲಿ ಸುಮಾರು 50 ಸಾವಿರ ಜನರಿಗೆ ಕುಳಿತುಕೊಳ್ಳಲು ಅನುವಾಗುವಂತೆ ಆಸನದ ವ್ಯವಸ್ಥೆ ಮಾಡಲಾಗುತ್ತದೆ. ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮಗಳು ಮುಖ್ಯ ವೇದಿಕೆಯೊಂದಿಗೆ ಎರಡು ಸಮಾನಾಂತರ ವೇದಿಕೆಗಳಲ್ಲೂ ಕಾರ್ಯಕ್ರಮಗಳು ಜರುಗುತ್ತವೆ. ಅದಕ್ಕಾಗಿ ಕೃಷಿ ವಿ.ವಿ.ಯ ಹಳೆಯ ಮತ್ತು ಹೊಸ ಅಡಿಟೋರಿಯಂಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಸಿ. ಸತೀಶ್, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ್, ಉಪ ಪೊಲೀಸ್ ಆಯುಕ್ತರಾದ ಬಿ.ಎಸ್. ನೇಮಗೌಡ, ರವೀಂದ್ರ ಗಡಾದ, ಸಹಾಯಕ ಪೊಲೀಸ್ ಆಯುಕ್ತ ಎಂ.ಎನ್. ರುದ್ರಪ್ಪ, ಪಾಲಿಕೆ ಆಯುಕ್ತ ಶಕೀಲ್, ಧಾರವಾಡ ತಹಶೀಲ್ದಾರ ಪ್ರಕಾಶ ಕುದರಿ, ಅಬಕಾರಿ ಜಿಲ್ಲಾ ಅಧಿಕಾರಿ ಬಿ.ಆರ್. ಹಿರೇಮಠ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ವ್ಹಿ.ಬಿ. ಯಮಕನಮರಡಿ, ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಕಾರ್ಯದರ್ಶಿ ಪ್ರೊ.ಜಿನದತ್ತ ಹಡಗಲಿ ಸೇರಿದಂತೆ ಕಸಾಪ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಮಿತಿಗಳ ಕಾರ್ಯಾಧ್ಯಕ್ಷರು ಮತ್ತು ಕೃಷಿ ವಿಶ್ವವಿದ್ಯಾಲಯದ ಅಧಿಕಾರಿಗಳು ಭಾಗವಹಿಸಿ ಮಾಹಿತಿ ನೀಡಿದರು.

Please follow and like us:

Leave a Reply

Your email address will not be published. Required fields are marked *