ರಾಜ್ಯ

ಶಿಥಿಲಗೊಂಡ ಶಾಲಾ ಕಟ್ಟಡ ನೆಲಸಮಗೊಳಿಸಿ : ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಆದೇಶ

ಧಾರವಾಡ : ವಿದ್ಯಾರ್ಥಿಗಳ ಪ್ರಾಣ ರಕ್ಷಣೆಯ ಮುನ್ನಚ್ಚರಿಕೆಯ ಕ್ರಮವಾಗಿ ಶಿಥಿಲಗೊಂಡ ಶಾಲಾ ಕಟ್ಟಡಗಳನ್ನು ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವ ನಿಟ್ಟಿನಲ್ಲಿ ಎಲ್ಲ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಓ) ಅವರು ಅಗತ್ಯ ಕ್ರಮಕೈಕೊಳ್ಳಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಆದೇಶಿಸಿದರು.

ಅವರು ನಗರದ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಭಾಭವನದಲ್ಲಿ ಮಂಗಳವಾರ ಜರುಗಿದ ಬೆಳಗಾವಿ ವಿಭಾಗ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಶಿಕ್ಷಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು ಈಗಾಗಲೇ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಶಿಥಿಲಗೊಂಡ ಶಾಲಾ ಕಟ್ಟಡಗಳನ್ನು ತಕ್ಷಣ ನೆಲಸಮಗೊಳಿಸಿ ಅಲ್ಲಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಮುಂದಾಗುವಂತೆ ಸೂಚಿಸಿದ್ದಾರೆ. ಹಾಗಾಗಿ ಅಧಿಕಾರಿಗಳು ಶಾಲಾ ಕಟ್ಟಡಗಳ ರಕ್ಷಣಾತ್ಮಕ ಸರ್ವೆ ನಡೆಸಿ ಪೂರಕ ಕ್ರಮಗಳನ್ನು ಕೈಕೊಳ್ಳಬೇಕೆಂದು ಸೂಚಿಸಿದರು.

ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸುವ ಶೈಕ್ಷಣಿಕ ಪ್ರವಾಸಗಳು ಶಾಲಾ ಮಕ್ಕಳಲ್ಲಿ ವೈಚಾರಿಕತೆ, ವೈಜ್ಞಾನಿಕ ಅನ್ವೇಷಣೆ, ಸಂಶೋಧನೆ, ಕಲೆ-ವಾಸ್ತುಶಿಲ್ಪ ವೀಕ್ಷಣೆ, ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾಗಿ ನಡೆಯಬೇಕು. ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರದಂತಹ ಕಲಿಕಾ ಪೂರಕ ಸ್ಥಳಗಳಿಗೆ, ವಿಶ್ವವಿದ್ಯಾಲಯಗಳಿಗೆ, ಸಂಶೋಧನಾ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ದು ಅವರ ಜ್ಞಾನಾರ್ಜನೆಗೆ ಹೆಚ್ಚು ಅವಕಾಶಗಳನ್ನು ಕಲ್ಪಿಸಬೇಕು ಎಂದರು.

‘ಸಕಾಲ’ ಸೇವೆಗಳ ಅಡಿ ದಾಖಲಾದ ಪ್ರಕರಣಗಳು ಬಾಕಿ ಉಳಿಯದಂತೆ ನೋಡಿಕೊಳ್ಳಬೇಕು. ನರೇಗಾ ಯೋಜನೆಯಡಿ ಸರಕಾರಿ ಶಾಲೆಗಳಿಗೆ ಅಗತ್ಯ ಆಟದ ಮೈದಾನ ಅಭಿವೃದ್ಧಿಗೆ ಕ್ರಿಯಾಯೋಜನೆ ಸಿದ್ಧಪಡಿಸಿ ಜಿಲ್ಲಾಪಂಚಾಯತಿಗೆ ಸಲ್ಲಿಸಬೇಕು. ಖಾಸಗಿ ಶಾಲೆಗಳಿಗೆ ಅನುಮತಿ ನೀಡುವ ಸಂದರ್ಭದಲ್ಲಿ ಸರಕಾರ ವಿಧಿಸಿರುವ ನಿಯಮಗಳು ಉಲ್ಲಂಘನೆಯಾಗದಂತೆ ಅಧಿಕಾರಿಗಳು ಎಚ್ಚರಿಕೆವಹಿಸಬೇಕು. ನಿಯಮ ಉಲ್ಲಂಘನೆಯಾದರೆ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಕೊಳ್ಳಲಾಗುವುದೆಂದು ಮೇಜರ್ ಸಿದ್ದಲಿಂಗಯ್ಯ ಎಚ್ಚರಿಸಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ರಾಜ್ಯ ಸಮಗ್ರ ಶಿಕ್ಷಣ ಅಭಿಯಾನದ ಗುಣಮಟ್ಟ ನಿರ್ದೇಶಕ ನಾಗೇಂದ್ರ ಮಧ್ಯಸ್ಥ, ಸಿಸ್ಲೆಪ್-ಕರ್ನಾಟಕ ಸಂಸ್ಥೆಯ ನಿರ್ದೇಶಕ ಬಿ.ಎಸ್. ರಘುವೀರ, ಇಲಾಖೆಯ ಜಂಟಿ ನಿರ್ದೇಶಕ ಡಾ. ಬಿ.ಕೆ.ಎಸ್. ವರ್ಧನ್, ಬೆಳಗಾವಿ ಸಿಟಿಇ ಪ್ರಿನ್ಸಿಪಾಲ್ ಮಮತಾ ನಾಯಕ, ಜಮಖಂಡಿ ಸಿಟಿಇ ಪ್ರಿನ್ಸಿಪಾಲ್ ರಾಜು ನಾಯಕ, ವಿಜಯಪೂರ, ಬಾಗಲಕೋಟ, ಉತ್ತರಕನ್ನಡ, ಗದಗ, ಧಾರವಾಡ, ಹಾವೇರಿ, ಬೆಳಗಾವಿ, ಚಿಕ್ಕೋಡಿ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಗಳ ಎಲ್ಲ ಆಡಳಿತ ಹಾಗೂ ಅಭಿವೃದ್ಧಿ ಉಪನಿರ್ದೇಶಕರು, 59 ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಮಗ್ರ ಶಿಕ್ಷಣ ಅಭಿಯಾನದ ಅಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Please follow and like us:

Leave a Reply

Your email address will not be published. Required fields are marked *