ರಾಜ್ಯ

ಸಕ್ಕರೆ ಕಾರ್ಖಾನೆ ಬಾಕಿ ಹಣ : ಜಾರಕಿಹೊಳಿ ಸಹೋದರರಿಗೆ ಹೆದರಿದರಾ ಸಿಎಂ !?

ಬೆಂಗಳೂರು : ಸಚಿವ ರಮೇಶ ಜಾರಕಿಹೊಳಿ ಮಾಲಿಕತ್ವದ ಸಕ್ಕರೆ ಕಾರ್ಖಾನೆ ಸೇರಿದಂತೆ ಮೂರು ಜಿಲ್ಲೆಗಳ 41 ಸಕ್ಕರೆ ಕಾರ್ಖಾನೆ ಮಾಲೀಕರ ಒತ್ತಡಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೆದರಿದರಾ ಎಂದು ರೈತರು ಕಿಡಿಕಾರಿದ್ದಾರೆ.

ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ತಲೆ ಕೆಳಗೆ ಮಾಡಿ ಕಾಲು ಮೇಲೆ ಮಾಡಿ ಪ್ರತಿಭಟನೆ ನಡೆಸುತ್ತಿರುವ ರೈತರು, ನಿನ್ನೆಯಷ್ಟೇ ಕಬ್ಬಿನ ಟ್ರ್ಯಾಕ್ಟರ್ ಪಲ್ಟಿ ಹೊಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ಬೆಂಗಳೂರಿಗೆ ಹೋಗಲು ಬಸ್ ಚಾರ್ಜ್ ಕೂಡ ನಮ್ಮ ಬಳಿಯಿಲ್ಲ. ಸಿಎಂ ಬೆಳಗಾವಿಗೆ ಆಗಮಿಸಿಯೇ ಸಭೆ ನಡೆಸಬೇಕು. ಈ ಮೊದಲು ಬೆಳಗಾವಿಯ ಸುವರ್ಣ ಸೌಧದ ಆವರಣದಲ್ಲಿ ಸಭೆ ನಡೆಸುವುದಾಗಿ ಭರವಸೆ ನೀಡಿದ್ದರು. ಇದೀಗ ಸಿಎಂ ಉಲ್ಟಾ ಹೊಡೆದಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

ವಿಶೇಷವಾಗಿ ಸಚಿವ ರಮೇಶ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯ ಲಕ್ಷ್ಮಿ ಸಕ್ಕರೆ ಕಾರ್ಖಾನೆ ಕೂಡ ಸಾವಿರಾರು ರೈತರಿಗೆ ಬಾಕಿ ಹಣ ನೀಡದೆ ಸತಾಯಿಸುತ್ತಿರುವ ಹಿನ್ನಲೆಯಲ್ಲಿ ಜಾರಕಿಹೊಳಿ ಸಹೋದರರಿಗೆ ಸಿಎಂ ಕುಮಾರಸ್ವಾಮಿ ಅವರು ಹೆದರಿದರಾ ಎಂದು ಮುರಗುಂಡಿ ಗ್ರಾಮದ ರೈತ ಮುಖಂಡ ಮಹಾದೇವ ಮಡಿವಾಳರ ಪ್ರಶ್ನಿಸಿದ್ದಾರೆ.

ಸಿಎಂ ಕುಮಾರಸ್ವಾಮಿ ಏಕಾಏಕಿ ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ, ಸಕ್ಕರೆ ಕಾರ್ಖಾನೆ ಮಾಲೀಕರ ಒತ್ತಡಕ್ಕೆ ಮಣಿದು ಬೆಂಗಳೂರಿನಲ್ಲಿ ಸಭೆಯನ್ನು ನಡೆಸುವ ಮೂಲಕ ಸಿಎಂ ಕುಮಾರಸ್ವಾಮಿ ಆತ್ಮವಂಚನೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈಗಾಗಲೇ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ರೈತರು ಬೀದಿಗಿಳಿದು ಹೋರಾಟ ಆರಂಭಿಸಿದ್ದು, ಬಾಕಿ ಹಣ ಪಡೆದ ನಂತರವೇ ಮನೆಗೆ ತೆರಳುವುದಾಗಿ ಪಟ್ಟು ಹಿಡಿದಿದ್ದಾರೆ. ಯಾವುದೇ ಕಾರಣಕ್ಕೂ ರೈತರು ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ದದ ಹೋರಾಟ ಕೈಬಿಡುವ ಪ್ರಶ್ನೇಯೇ ಇಲ್ಲ. ಜಿಲ್ಲಾಧಿಕಾರಿಗಳು ಕೂಡ ಅವರ ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ. ಎಲ್ಲರೂ ಸೇರಿ ರೈತರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಎದುರು ಮತ್ತೇ ಹೋರಾಟ ಆರಂಭಗೊಂಡಿದ್ದು,ಅಹೋರಾತ್ರಿ ಹೋರಾಟ ಸೇರಿದಂತೆ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳಿವೆ. 41 ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಸಿಎಂ ಕುಮಾರಸ್ವಾಮಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ರೈತರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆಯನ್ನು ಶೀಘ್ರದಲ್ಲಿಯೇ ಬಗೆಹರಿಸಲಿದ್ದಾರೆ ಎಂದು ಸಹಕಾರ ಸಚಿವ ಬಂಡೆ್ಪ್ಪಾ ಕಾಶೆಂಪೂರ ಅವರು ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *