ಧಾರವಾಡ prajakiran.com : ರಾಜ್ಯಾದ್ಯಂತ ಕೊರೊನಾ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾನುವಾರ ದಿನಗಳಂದು ಸರ್ಕಾರದಿಂದ ಸಂಪೂರ್ಣ ಲಾಕ್ಡೌನ್ ಆದೇಶಿಸಲಾಗಿದೆ.
ಈ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ಹಾಗೂ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರಲ್ಲಿ ಪ್ರದತ್ತವಾದ ಅಧಿಕಾರದ ರೀತ್ಯ ಜುಲೈ 5, 12, 19, 26, ಆಗಸ್ಟ್ 2ರಂದು ಇರುವ ಭಾನುವಾರಗಳಂದು ಸಂಪೂರ್ಣ ಮದ್ಯ ಸಾಗಾಟ ಮತ್ತು ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ನಿತೇಶ್ ಕೆ. ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.
ಇದಲ್ಲದೆ, ಮದ್ಯ ಉತ್ಪಾದನೆ, ಮದ್ಯ ಸಾಗಾಟ ಮತ್ತು ಮದ್ಯ ಮಾರಾಟವನ್ನು ನಿಷೇಧಿಸಿದ ಭಾನುವಾರಗಳ ಹಿಂದಿನ ದಿನ ಅಂದರೆ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನ 9 ಗಂಟೆಯವರೆಗೆ ನಿಷೇಧಾಜ್ಞೆಯು ಜಾರಿಯಲ್ಲಿರುತ್ತದೆ.
ಈ ಹಿನ್ನಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತರು, ಧಾರವಾಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ, ಧಾರವಾಡ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಹಾಗೂ ಹೆಚ್ಚುವರಿ ಆರಕ್ಷಕ ಅಧೀಕ್ಷಕರು ಧಾರವಾಡ ಜಿಲ್ಲೆಯಾದ್ಯಂತ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
